ಇದೀಗ ಬಂದ ಸುದ್ದಿ
Sat. Dec 21st, 2024

ಮೈಸೂರು (05-11-2023): ಬರಪರಿಹಾರ ಕಾರ್ಯಗಳಿಗೆ 900 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದ್ದು, ಪರಿಹಾರ ಕಾರ್ಯಗಳು ಪ್ರಾರಂಭವಾಗಿವೆ ಎಂದು ಸಿ.ಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಮಾಧ್ಯಮಗಳಿಗೆ ನೀಡಿದ ಪ್ರತಿಕ್ರಿಯೆಯಲ್ಲಿ ತಿಳಿಸಿದ್ದಾರೆ.

ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರು ನವೆಂಬರ್ 15 ರೊಳಗೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆ ಭೇಟಿ ನೀಡಿ ಬರಪರಿಸ್ಥಿತಿಯ ಅಧ್ಯಯನ ಹಾಗೂ ಜನರನ್ನು ಭೇಟಿ ಮಾಡಿ ವರದಿ ನೀಡುವಂತೆ ಪತ್ರ ಬರೆಯಲಾಗಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು. ಇದೇ ಸಂದರ್ಭದಲ್ಲಿ ಅವರು, ರಾಜ್ಯದಲ್ಲಿ ಬರ ಪರಿಹಾರ ಕಾರ್ಯಗಳು ಪ್ರಾರಂಭವಾಗಿವೆ. ಕೇಂದ್ರ ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲ ಎಂದು ಯಾವುದೇ ಕೆಲಸ ನಿಲ್ಲಿಸಿಲ್ಲ. ಕುಡಿಯುವ ನೀರು, ಉದ್ಯೋಗ ನೀಡುವುದು ಯಾವುದೂ ನಿಂತಿಲ್ಲ ಎಂದು ಹೇಳಿದರು.‌

ನಾವು ಪತ್ರ ಬರೆದ ಮೇಲೆ 600 ಕೋಟಿ ರೂ.ಗಳನ್ನು ಮಹತ್ಮಾ ಗಾಂಧಿ ನರೇಗಾ ಯೋಜನೆಯಡಿ ನಿನ್ನೆ ಹಣ ಬಿಡುಗಡೆ ಮಾಡಿದ್ದಾರೆ. 33,000 ಕೋಟಿ ರೂ.ಗಳಷ್ಟು ಹಾನಿಯಾಗಿದ್ದು, ಮಾರ್ಗಸೂಚಿ ಪ್ರಕಾರ 17,900 ಕೋಟಿ ರೂ.ಗಳನ್ನು ಬಿಡುಗಡೆ ಮಾಡಬೇಕೆಂದು ಕೋರಿದ್ದೇವೆ. ಇವತ್ತಿನವರೆಗೆ ನಮ್ಮ ರಾಜ್ಯದ ಮಂತ್ರಿಗಳಿಗೆ ಕೇಂದ್ರ ಸಚಿವರು ಭೇಟಿಗೆ ಅವಕಾಶವನ್ನೇ ನೀಡಿಲ್ಲ. ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಕೃಷಿ ಸಚಿವರನ್ನು ದೆಹಲಿಗೆ ಕಳುಹಿಸಲಾಗಿತ್ತು. ಮೂವರಿಗೂ ಭೇಟಿಗೆ ಅವಕಾಶ ನೀಡಿಲ್ಲ. ಪ್ರಧಾನಮಂತ್ರಿಗಳೂ ಸಮಯಾವಕಾಶ ನೀಡಿಲ್ಲದ ಕಾರಣ ಕೇಂದ್ರ ಸರ್ಕಾರದ ಕೃಷಿ, ಕಂದಾಯ ಹಾಗೂ ಗೃಹ ಕಾರ್ಯದರ್ಶಿಗಳನ್ನು ಭೇಟಿ ಮಾಡಿ ಬಂದಿದ್ದಾರೆ.

ಪರಿಹಾರಕ್ಕಾಗಿ ಒತ್ತಾಯ ಮಾಡಲು ಪ್ರಧಾನಮಂತ್ರಿಗಳಿಗೆ ಹಾಗೂ ಗೃಹ ಸಚಿವರಿಗೆ ಪುನಃ ಪತ್ರ ಬರೆಯಲಾಗಿದೆ. ಬಿಜೆಪಿ ಅವರು ರಾಜ್ಯದಲ್ಲಿ ಪ್ರವಾಸ ಮಾಡಿ ಏನು ಮಾಡುತ್ತಾರೆ? ಅವರಿಗೆ ಕರ್ನಾಟಕದ ರೈತರ ಬಗ್ಗೆ ನಿಜವಾಗಿಯೂ ಕಾಳಜಿ ಇದ್ದರೆ ದೆಹಲಿಗೆ ತೆರಳಿ ಹಣ ಬಿಡುಗಡೆ ಮಾಡಿಸಲಿ ಎಂದು ಸಿಎಂ ಪ್ರತಿಕ್ರಿಯೆಯಲ್ಲಿ ತಿಳಿಸಿದ್ದಾರೆ.

Related Post

Leave a Reply

Your email address will not be published. Required fields are marked *