ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ, ಬಳ್ಳಾರಿಯ ಸಂಡೂರು ವಿಧಾನಸಭಾ ಕ್ಷೇತ್ರದ ಫಲಿತಾಂಶ ಪ್ರಕಟವಾಗಿದೆ. ಕಾಂಗ್ರೆಸ್ನಿಂದ ಸ್ಪರ್ಧಿಸಿದ್ದ ಸಂಸದ ಇ ತುಕಾರಾಂ ಪತ್ನಿ ಅನ್ನಪೂರ್ಣ ತುಕಾರಾಮ ಅವರು ವಿಜಯಶಾಲಿಯಾಗಿದ್ದಾರೆ. ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಅವರಿಗೆ ಸೋಲಾಗಿದೆ ಎಂದು ವರದಿಗಳಾಗಿವೆ.
2023ರಲ್ಲಿ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸಂಡೂರು ವಿಧಾನಸಭಾ ಕ್ಷೇತ್ರದಿಂದ ಇ ತುಕಾರಾಂ ಸ್ಪರ್ಧಿಸಿ ಗೆಲವು ಸಾಧಿಸಿದ್ದರು. ಆದರೆ, 2024ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಇ ತುಕಾರಾಂ ಅವರು ಲೋಕಸಭೆಗೆ ಸ್ಪರ್ಧಿಸಿ ಗೆಲವು ಸಾಧಿಸಿದರು. ಬಳಿಕ, ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದರು.
ಹೀಗಾಗಿ, ತೆರವಾಗಿದ್ದ ಸಂಡೂರು ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರಿಗೆ ವಿಜಯಲಕ್ಷ್ಮಿ ಒಲಿದಿದ್ದಾಳೆ. ಇನ್ನು, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಆಪ್ತ, ಪಕ್ಷಕ್ಕೆ ನಿಷ್ಠಾವಂತನಾಗಿರುವ ಬಂಗಾರು ಹನುಮಂತು ಅವರಿಗೆ ಸೋಲಾಗಿದೆ.